ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದ ಮಾಜಿ ಸಚಿವ, ಬಿಜೆಪಿ ನಾಯಕ ವಿ ಸೋಮಣ್ಣ ಅವರ ಮನವೊಲಿಸುವಲ್ಲಿ ಬಿಜೆಪಿ ಹೈಕಮಾಂಡ್ ಯಶಸ್ವಿಯಾಗಿದೆ.
ರಾಜ್ಯ ಬಿಜೆಪಿಯ ಕೆಲವು ನಾಯಕರ ನಡೆಯಿಂದ ಅಸಮಾಧಾನಗೊಂಡಿರುವ ಮಾಜಿ ಸಚಿವ ವಿ.ಸೋಮಣ್ಣ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದರು. ತಮ್ಮನ್ನು ರಾಜ್ಯಸಭಾ ಸದಸ್ಯರನ್ನಾಗಿ ಮಾಡುವಂತೆ ವರಿಷ್ಠರಲ್ಲಿ ಮನವಿ ಮಾಡಿಕೊಂಡಿದ್ದರು.
ಜನವರಿ 8ರಂದು (ಸೋಮವಾರ) ದೆಹಲಿಗೆ ತೆರಳಿದ್ದ ಸೋಮಣ್ಣ ಅವರು ವರಿಷ್ಠರ ಭೇಟಿಗೆ ನಿರಂತರ ಪ್ರಯತ್ನ ನಡೆಸಿದ್ದರು. ಶುಕ್ರವಾರ ತಡರಾತ್ರಿ ವರಿಷ್ಠರನ್ನು ಭೇಟಿ ಮಾಡಿ ಚರ್ಚಿಸಿದರು. ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಕೆಲವು ಮುಖಂಡರು ದ್ವೇಷದ ರಾಜಕಾರಣ ಮಾಡಿ ತಮ್ಮನ್ನು ಸೋಲಿಸಿದರು ಎಂದು ವರಿಷ್ಠರ ಗಮನಕ್ಕೆ ತಂದರು.
