ಜೆಡಿಎಸ್ ನಾಯಕ ಮತ್ತು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ಮಂಗಳವಾರ 66ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಹೆಚ್‌ಡಿಕೆ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.
ಜನ್ಮದಿನಕ್ಕೆ ಶುಭಾಶಯ ಕೋರಿದ ಪ್ರಧಾನಿ ಮೋದಿ ಅವರಿಗೆ ಹೆಚ್‌ಡಿ ಕುಮಾರಸ್ವಾಮಿ ಧನ್ಯವಾದ ಅರ್ಪಿಸಿದ್ದಾರೆ. ಪ್ರಧಾನಿ ಅವರ ಶುಭಾಶೀರ್ವಾದಿಂದ ಭಾವುಕರಾಗಿರುವುದಾಗಿ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನನ್ನ ಹುಟ್ಟುಹಬ್ಬದ ಈ ಸಂದರ್ಭದಲ್ಲಿ ಗೌರವಾನ್ವಿತ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ಅವರ ಶುಭಾಶಯ ಹಾಗೂ ಶುಭಾಶೀರ್ವಾದದಿಂದ ನಾನು ಭಾವುಕನಾಗಿದ್ದೇನೆ ಮತ್ತು ವಿನೀತನಾಗಿದ್ದೇನೆ. ಅವರ ಪಿತೃವಾತ್ಸಲ್ಯಕ್ಕೆ ನಾನು ಧನ್ಯನಾಗಿದ್ದೇನೆ. ಮಾನ್ಯ ಪ್ರಧಾನಿಗಳ ಚಿಂತನಶೀಲ ಮಾರ್ಗದರ್ಶನ, ಪ್ರೋತ್ಸಾಹ ಮತ್ತು ನನ್ನ ಮೇಲಿನ ನಂಬಿಕೆಗೆ ನಾನು ಚಿರಋಣಿ ಆಗಿದ್ದೇನೆಂದು ಹೇಳಿದ್ದಾರೆ
